ಕಲಬುರಗಿ ಜಿಲ್ಲೆಯಲ್ಲಿ ಪಡಿತರ ಅಕ್ಕಿಯನ್ನು ಅಕ್ರಮವಾಗಿ ಸಂಗ್ರಹಿಸಿ ಸಾಗಾಟ ಮಾಡುತ್ತಿರುವಾಗ ಖಚಿತ ಮಾಹಿತಿ ಮೇರೆಗೆ ದೂರು ಬಂದ ಆಧಾರದ ಮೇಲೆ ದಾಳಿ ಮಾಡಿ 17,70,275 ರೂ. ಮೌಲ್ಯದ ಒಟ್ಟು 515 ಕ್ವಿಂಟಾಲ್ ಪಡಿತರ ಅಕ್ಕಿ ಹಾಗೂ 6 ವಾಹನಗಳನ್ನು ಜಪ್ತಿ ಮಾಡಿ ಈ ಕೃತ್ಯಗಳಲ್ಲಿ ಭಾಗಿಯಾದ 18 ಜನ ಆರೋಪಿಗಳ ವಿರುದ್ಧ ಪ್ರಕರಣ ದಾಖಲಿಸಲಾಗಿದೆ ಎಂದು ಕಲಬುರಗಿ ಆಹಾರ ಇಲಾಖೆಯ ಉಪನಿರ್ದೇಶಕರು ತಿಳಿಸಿದ್ದಾರೆ.
ಸಾರ್ವಜನಿಕ ವಿತರಣಾ ವ್ಯವಸ್ಥೆಯಡಿ ಪಡಿತರ ಚೀಟಿದಾರರಿಗೆ ಹಂಚಿಕೆಯಾಗಿರುವ ಅಕ್ಕಿಯನ್ನು ಅಕ್ರಮವಾಗಿ ಖರೀದಿ ಮಾಡಿ ಹೆಚ್ಚಿನ ಬೆಲೆಗೆ ಮಾರಾಟ ಮಾಡುವ ಉದ್ದೇಶದಿಂದ ಅನಧೀಕೃತವಾಗಿ ಸಂಗ್ರಹಿಸಿ ಮಾರಾಟ ಮಾಡುವುದು ಗಂಭೀರವಾದ ಅಪರಾಧವಾಗಿದ್ದು, ಇಂತಹ ಅಪರಾಧಗಳಲ್ಲಿ ಭಾಗಿಯಾದವರ ವಿರುದ್ಧ ಅತ್ಯಂತ ಕಠಿಣ ಕ್ರಮಕೈಗೊಳ್ಳಲಾಗುತ್ತದೆ ಎಂದು ಅವರು ತಿಳಿಸಿದ್ದಾರೆ.
ಕಲಬುರಗಿ ಜಿಲ್ಲೆಯಲ್ಲಿ ಸರ್ಕಾರದ ವಿವಿಧ ಯೋಜನೆಯಡಿ ಹಾಗೂ ಸಾರ್ವಜನಿಕ ವಿತರಣಾ ವ್ಯವಸ್ಥೆಯಡಿ ವಿತರಿಸಲಾಗುತ್ತಿರುವ ಪಡಿತರ ಅಕ್ಕಿಯನ್ನು ಅಕ್ರಮವಾಗಿ ಮಾರಾಟ ಮಾಡುವುದು, ಖರೀದಿ ಮಾಡುವುದು ಹಾಗೂ ಅಕ್ರಮ ದಾಸ್ತಾನು ಸಾಗಾಣಿಕೆ ಮಾಡುವುದು ಕಂಡುಬಂದಲ್ಲಿ ಸಾರ್ವಜನಿಕರು ಕೂಡಲೇ ಆಹಾರ ಇಲಾಖೆಗೆ ಅಥವಾ ಪೊಲೀಸ್ ಇಲಾಖೆಗೆ ನಿರ್ಭೀತಿಯಾಗಿ ಮಾಹಿತಿ ನೀಡಿಬೇಕು. ಇಂತಹ ಪ್ರಕರಣಗಳಲ್ಲಿ ಭಾಗಿಯಾದವರ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುದೆ. ಮಾಹಿತಿ ನೀಡಿದವರ ವಿವರಗಳನ್ನು ಗೌಪ್ಯವಾಗಿ ಇಡಲಾಗುತ್ತದೆ ಎಂದು ಹೇಳಿದರು.
ಆಳಂದ ತಾಲೂಕಿನ ನರೋಣಾ ಪೊಲೀಸ್ ಠಾಣೆಯಲ್ಲಿ-1, ಆಳಂದ ಪೊಲೀಸ್ ಠಾಣೆ-1, ಸೇಡಂ ಪೊಲೀಸ್ ಠಾಣೆಯಲ್ಲಿ-1, ಕಲಬುರಗಿ ನಗರದ ಸಬ್-ಅರ್ಬನ್ ಪೊಲೀಸ್ ಠಾಣೆಯಲ್ಲಿ–2, ರೋಜಾ ಪೊಲೀಸ್ ಠಾಣೆಯಲ್ಲಿ-1, ಚೌಕ್ ಪೊಲೀಸ್ ಠಾಣೆಯಲ್ಲಿ-1 ಸೇರಿದಂತೆ ಒಟ್ಟು 7 ಪ್ರಕರಣಗಳನ್ನು ಅಗತ್ಯ ವಸ್ತುಗಳ ಕಾಯ್ದೆ-1955 ರಡಿ ದಾಖಲಿಸಲಾಗಿದೆ.