
ಬೆಳಗಾವಿ ಜಿಲ್ಲೆ ಚಿಕ್ಕೋಡಿ ಪಟ್ಟಣದ ಲೋಕೋಪಯೋಗಿ ಪ್ರವಾಸಿ ಮಂದಿರದಲ್ಲಿ ಬುಧವಾರ ರಂದು ಜರುಗಿದ ಚಿಕ್ಕೋಡಿ ತಾಲೂಕು ಮಟ್ಟದ ಜನಸ್ಪಂಧನ ಕಾರ್ಯಕ್ರಮದಲ್ಲಿ ಸಾರ್ವಜನಿಕ ಅರ್ಜಿಗಳನ್ನು ಜಿಲ್ಲಾಧಿಕಾರಿ ನಿತೇಶ ಪಾಟೀಲ ಅವರು ಸ್ವೀಕರಿಸಿ ಅವರು ಮಾತನಾಡಿದರು. ಆಡಳಿತವೆ ಜನರ ಮನೆ ಬಾಗಿಲಿಗೆ ತೆರಳಿ ಸಾರ್ವಜನಿಕರ ಸಮಸ್ಯೆಗಳಿಗೆ ತ್ವರಿತ ಪರಿಹಾರ ಒದಗಿಸುವ ನಿಟ್ಟಿನಲ್ಲಿ ಜನಸ್ಪಂಧನ ಕಾರ್ಯಕ್ರಮವನ್ನು ಆಯೋಜಿಸಲಾಗುತ್ತಿದೆ.
ಸಾರ್ವಜನಿಕರಿಂದ ಸ್ವೀಕೃತವಾದಂತಹ ಅಹವಾಲುಗಳಿಗೆ ತ್ವರಿತವಾಗಿ ಪರಿಹಾರ ಕಲ್ಪಿಸುವುದು ಹಾಗೂ ಸಾರ್ವಜನಿಕರು ಸರಕಾರಿ ಕಚೇರಿಗೆ ಅಲೆದಾಡುವದನ್ನು ತಪ್ಪಿಸುವದು ಈ ಕಾರ್ಯಕ್ರಮದ ಉದ್ದೇಶವಾಗಿದೆ. ನಿಟ್ಟಿನಲ್ಲಿ ಸಂಬಂಧಿಸಿದ ಇಲಾಖಾ ಅಧಿಕಾರಿಗಳು ಸಾರ್ವಜನಿಕರ ಸಮಸ್ಯೆಗಳಿಗೆ ಸ್ಪಂದಿಸುವದರ ಮೂಲಕ ಸಮಸ್ಯೆಗಳ ನಿವಾರಣಗೆ ಮುಂದಾಗಬೇಕು.
ಏಕೀಕೃತ ಸಾರ್ವಜನಿಕ ಕುಂದುಕೊರತೆ ನಿವಾರಣಾ ವ್ಯವಸ್ಥೆಯಡಿ ದಾಖಲಾಗುವ ಸಾರ್ವಜನಿಕ ಅಹವಾಲುಗಳಿಗೆ ಸಂಬಂಧಿಸಿದ ಇಲಾಖಾ ಅಧಿಕಾರಿಗಳು ಕಾಲಮಿತಿಯೊಳಗಾಗಿಯೇ ಇತ್ಯರ್ಥ ಪಡಿಸಬೇಕು. ಜನಸ್ಪಂಧನ ಕಾರ್ಯಕ್ರಮದಡಿ ಸ್ವೀಕೃತವಾಗುವ ಅರ್ಜಿಗಳ ಕುರಿತು ಯಾವುದೇ ರೀತಿಯ ಉದಾಸಿನತೆ, ನಿರ್ಲಕ್ಷ ಮನೋಭಾವ ತೋರದಂತೆ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ನಿತೇಶ ಪಾಟೀಲ ಅವರು ಕಟ್ಟುನಟ್ಟಿನ ಸೂಚನೆ ನೀಡಿದರು.
ಜನಸ್ಪಂದನ ಕಾರ್ಯಕ್ರಮದಡಿ ರಸ್ತೆ, ಚರಂಡಿ, ಬೆಳೆವಿಮೆ, ಪಹಣಿ ಪತ್ರ ತಿದ್ದುಪಡಿ, ಪಿಂಚಣಿ ಸೇರಿದಂತೆ ವಿವಿಧ ಸಮಸ್ಯೆಗಳ ಕುರಿತು ಅಹವಾಲುಗಳನ್ನು ಜಿಲ್ಲಾಧಿಕಾರಿ ನಿತೇಶ ಪಾಟೀಲ ಅವರು ಸಾರ್ವಜನಿಕರಿಂದ ಸ್ವೀಕರಿಸಿದರು.
ಈ ಸಂದರ್ಭದಲ್ಲಿ ಜಿಲ್ಲಾ ಪೊಲಿಸ್ ವರಿಷ್ಠಾಧಿಕಾರಿ ಡಾ.ಭೀಮಾಶಂಕರ ಗುಳೇದ, ಜಿ.ಪಂ. ಸಿ.ಇ.ಓ. ರಾಹುಲ ಶಿಂಧೆ, ಚಿಕ್ಕೋಡಿ ತಹಶೀಲ್ದಾರ ಚಿದಂಬರ ಕುಲಕರ್ಣಿ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು, ಸಿಬ್ಬಂದಿಗಳು, ಸಾರ್ವಜನಿಕರು ಉಪಸ್ಥಿತರಿದ್ದರು.


