
ಬಳ್ಳಾರಿ ನಗರದ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಡಿ.ದೇವರಾಜು ಅರಸು ಅವರ 109 ನೇ ಜನ್ಮ ದಿನಾಚರಣೆ ಅಂಗವಾಗಿ ಏರ್ಪಡಿಸಿದ್ದ ಪೂರ್ವಭಾವಿ ಸಭೆಯ ಅಧ್ಯಕ್ಷತೆಯನ್ನು ಅಪರ ಜಿಲ್ಲಾಧಿಕಾರಿ ಮೊಹಮ್ಮದ್ ಝುಬೇರ್ ವಹಿಸಿ ಮಾತನಾಡಿದರು.
ಆಗಸ್ಟ್ 20 ರಂದು ಬೆಳಿಗ್ಗೆ 10.30 ಕ್ಕೆ ನಗರದ ವಾಲ್ಮೀಕಿ ಭವನದಲ್ಲಿ ವೇದಿಕೆ ಕಾರ್ಯಕ್ರಮ ನಡೆಯಲಿದ್ದು, ಜಿಲ್ಲಾ ಮಟ್ಟದ ಅಧಿಕಾರಿಗಳು, ಎಲ್ಲಾ ಸಂಘ ಸಂಸ್ಥೆಯ ಮುಖಂಡರು ಮತ್ತು ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಬೇಕು. ಹಿಂದುಳಿದ ವರ್ಗಗಳ ಹರಿಕಾರರಾಗಿರುವ ಡಿ.ದೇವರಾಜು ಅರಸು ಅವರ ಜನ್ಮದಿನಾಚರಣೆಯನ್ನು ಅರ್ಥಪೂರ್ಣವಾಗಿ ಆಚರಿಸುವ ನಿಟ್ಟಿನಲ್ಲಿ ಎಲ್ಲ ಸಿದ್ಧತೆ ಮಾಡಿಕೊಳ್ಳಬೇಕು ಎಂದು ಸೂಚಿಸಿದರು.
ಶಿಷ್ಠಾಚಾರದಂತೆ ಆಹ್ವಾನ ಪತ್ರಿಕೆಯನ್ನು ಮುದ್ರಿಸಿ ಗಣ್ಯರನ್ನು ಆಹ್ವಾನಿಸಬೇಕು. ಕುಡಿಯುವ ನೀರಿನ ವ್ಯವಸ್ಥೆ , ಸ್ವಚ್ಛತೆ ಕೈಗೊಳ್ಳಬೇಕು ಎಂದು ಮಹಾನಗರ ಪಾಲಿಕೆ ಅಧಿಕಾರಿಗಳಿಗೆ ಸೂಚಿಸಿದರು.
ಹಿಂದುಳಿದ ವರ್ಗಗಳ ವಿದ್ಯಾರ್ಥಿ ನಿಲಯಗಳ ಮಕ್ಕಳಿಗೆ ವಿವಿಧ ಸ್ಪರ್ಧೆಗಳನ್ನು ಆಯೋಜಿಸಿ ವಿಜೇತರಿಗೆ ಬಹುಮಾನ ವಿತರಿಸಲಾಗುವುದು. ಕಳೆದ ಸಾಲಿನ ಶೈಕ್ಷಣಿಕ ವರ್ಷದಲ್ಲಿ ಎಸ್‌ಎಸ್‌ಎಲ್‌ಸಿ, ಪಿಯುಸಿ, ಪದವಿ ಮತ್ತು ಪಿಹೆಚ್ ಡಿ ಪದವಿ ಪಡೆದ ವಿದ್ಯಾರ್ಥಿಗಳಿಗೆ ಕಾರ್ಯಕ್ರಮದಲ್ಲಿ ಸನ್ಮಾನಿಸಲಾಗುವುದು ಎಂದು ತಿಳಿಸಿದರು.
ಅದೇರೀತಿಯಾಗಿ ಜಿಲ್ಲೆಯಲ್ಲಿ ಸಾವಯವ ಕೃಷಿ ಪದ್ಧತಿಯಲ್ಲಿ ಯಶಸ್ಸು ಗಳಿಸಿದ ಹಿಂದುಳಿದ ವರ್ಗಗಳ ರೈತರನ್ನು ಸನ್ಮಾನಿಸಿ ಗೌರವಿಸಲಾಗುತ್ತದೆ ಎಂದು ತಿಳಿಸಿದ ಅವರು, ವಿಶೇಷ ಸಂಪನ್ಮೂಲ ವ್ಯಕ್ತಿಗಳಿಂದ ಡಾ.ದೇವರಾಜು ಅರಸು ಕುರಿತು ವಿಶೇಷ ಉಪನ್ಯಾಸ ಆಯೋಜನೆ ಮಾಡಬೇಕು ಎಂದು ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.


