ಸೆಪ್ಟೆಂಬರ್ 15 ರ ಪ್ರಜಾಪ್ರಭುತ್ವದಿನವನ್ನು ಎಲ್ಲರೂ ಸೇರಿ ಸಂಭ್ರಮಿಸೋಣ; ಸಚಿವ ಸಂತೋಷ ಲಾಡ

WhatsApp Group Join Now

ಧಾರವಾಡ ಜಿಲ್ಲಾ ಪಂಚಾಯತ ಸಭಾಂಗಣದಲ್ಲಿ ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಪ್ರಯುಕ್ತ ಜಿಲ್ಲಾ ಮಟ್ಟದ ಅಧಿಕಾರಿಗಳ ಮತ್ತು ವಿವಿಧ ಸರ್ಕಾರೇತರ ಸಂಘ, ಸಂಸ್ಥೆಗಳ ಪ್ರತಿನಿಧಿಗಳೊಂದಿಗೆ ಪೂರ್ವಭಾವಿ ಸಭೆಯ ಅಧ್ಯಕ್ಷತೆಯನ್ನು ಕಾರ್ಮಿಕ ಇಲಾಖೆ ಹಾಗೂ ಧಾರವಾಡ ಜಿಲ್ಲಾ ಉಸ್ತುವಾರಿ ಸಚಿವರಾದ ಸಂತೋಷ ಲಾಡ್ ಅವರು ವಹಿಸಿ ಮಾತನಾಡಿದರು.

ರಾಜ್ಯದಲ್ಲಿ ಬೀದರದಿಂದ ಚಾಮರಾಜನಗರದವರೆಗೆ ಏಕಕಾಲಕ್ಕೆ ರಾಜ್ಯದ ಎಲ್ಲ 31 ಜಿಲ್ಲೆಗಳಲ್ಲಿ ಮಾನವ ಸರಪಳಿ ರೂಪಿಸುವ ಮೂಲಕ ಪ್ರಜಾಪ್ರಭುತ್ವದ ಏಕತೆ, ಸದೃಡತೆ, ಸಾಮರಸ್ಯ ಮತ್ತು ಜನಶಕ್ತಿ ಸಾರುವ ಸಂಕೇತವಾಗಿ ಮಾನವಸರಪಳಿ ರೂಪಿಸಲಾಗುತ್ತಿದೆ. ಜಿಲ್ಲೆಯ ಎಲ್ಲರೂ ಈ ಕಾರ್ಯಕ್ರಮದಲ್ಲಿ ಸಕ್ರಿಯವಾಗಿ ಭಾಗವಹಿಸಬೇಕೆಂದು ಸೂಚಿಸಿದರು.

ಜಿಲ್ಲೆಯ 51 ಕಿ.ಮೀ ಮಾರ್ಗದಲ್ಲಿ ಮಾನವಸರಪಳಿ ನಿರ್ಮಿಸಲಾಗುತ್ತಿದೆ. ಪ್ರತಿ ಕಿ.ಮೀಟರಗೆ ನೇಮಿಸುವ ನೊಡಲ್ ಅಧಿಕಾರಿ ಯೋಜಿತ ರೀತಿಯಲ್ಲಿ ಕಾರ್ಯ ನಿರ್ವಹಿಸಬೇಕು ಎಂದು ಅವರು ಹೇಳಿದರು. ಈ ಕಾರ್ಯಕ್ರಮ ಯಶಸ್ವಿಗೆ ಪ್ರತಿಯೊಬ್ಬರು ಶ್ರಮಿಸಿ, ಪಾಲ್ಗೊಳ್ಳಬೇಕು ಎಂದು ಸಚಿವರು ತಿಳಿಸಿದರು.

ಜಿಲ್ಲಾಧಿಕಾರಿ ದಿವ್ಯ ಪ್ರಭು ಅವರು ಪ್ರಾಸ್ತಾವಿಕವಾಗಿ ಮಾತನಾಡಿ, ವಿಶ್ವದ ಅತಿ ದೊಡ್ಡ ಪ್ರಜಾಪ್ರಭುತ್ವ ರಾಷ್ಟ್ರವಾಗಿರುವ ನಾವು ಅಂತರ ರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆಯನ್ನು ವಿಶೇಷವಾಗಿ ಆಚರಿಸಲಾಗುತ್ತಿದೆ. ಸಮಾಜ ಕಲ್ಯಾಣ ಇಲಾಖೆ ಸಂಯೋಜಕತ್ವದಲ್ಲಿ ಈಗಾಗಲೇ ವಿವಿಧ ಇಲಾಖೆಗಳ ಅಧಿಕಾರಿಗಳು ಕಾರ್ಯ ನಿರತರಾಗಿದ್ದಾರೆ. ಈ ವಿಶಿಷ್ಟ ಕಾರ್ಯಕ್ರಮದಲ್ಲಿ ಜಿಲ್ಲೆಯ ವಿದ್ಯಾರ್ಥಿಗಳು, ಸಂಘ, ಸಂಸ್ಥೆಗಳ ಪ್ರತಿನಿಧಿಗಳು, ಸರಕಾರಿ ನೌಕರರು, ಕುಟುಂಬದವರು, ಸಾರ್ವಜನಿಕರು ಭಾಗವಹಿಸಬೇಕೆಂದು ಅವರು ಹೇಳಿದರು.

ಅಪರ ಜಿಲ್ಲಾಧಿಕಾರಿ ಗೀತಾ ಸಿ.ಡಿ. ಅವರು ಸ್ವಾಗತಿಸಿದರು. ಹುಬ್ಬಳ್ಳಿ ಧಾರವಾಡ ಮಹಾನಗರ ಪೋಲಿಸ್ ಆಯುಕ್ತ ಎನ್.ಶಶಿಕುಮಾರ, ಜಿಲ್ಲಾ ಪಂಚಾಯತ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಸ್ವರೂಪ ಟಿ.ಕೆ., ಜಿಲ್ಲಾ ಹೆಚ್ಚುವರಿ ಪೊಲೀಸ್ ಅಧೀಕ್ಷಕ ನಾರಾಯಣ ಬರಮನಿ, ಮಹಾನಗರ ಪಾಲಿಕೆ ಆಯುಕ್ತ ಡಾ. ಈಶ್ವರ ಉಳ್ಳಾಗಡ್ಡಿ ವೇದಿಕೆಯಲ್ಲಿದ್ದರು.

ಈ ವೇಳೆ ಉಪವಿಭಾಗಾಧಿಕಾರಿ ಶಾಲಂ ಹುಸೇನ್, ಜಿಲ್ಲಾ ಪಂಚಾಯತ ಉಪ ಕಾರ್ಯದರ್ಶಿ ಬಿ.ಎಸ್.ಮುಗನೂರಮಠ, ಕವಿವಿ ಕುಲಸಚಿವ ಎ.ಚನ್ನಪ್ಪ, ವಿವಿಧ ಇಲಾಖೆಗಳ ಜಿಲ್ಲಾಮಟ್ಟದ ಅಧಿಕಾರಿಗಳು, ಮುಖಂಡರಾದ ಲಕ್ಷ್ಮಣ ಬಕ್ಕಾಯಿ, ಮಹೇಂದ್ರ ಸಿಂಘಿ, ಅಶೋಕ ದೊಡಮನಿ ಸೇರಿದಂತೆ ಅನೇಕರು ಪಾಲ್ಗೊಂಡಿದ್ದರು.

About The Author