ಬೆಳಗಾವಿ, ರಾಜ್ಯದಲ್ಲಿ ಹೊಸದಾಗಿ 3988 ಅಂಗನವಾಡಿ ಕೇಂದ್ರಗಳನ್ನು ತೆರೆಯಲು ಕೇಂದ್ರ ಸರ್ಕಾರದ ಅನುಮೋದನೆಗೆ ಪ್ರಸ್ತಾವನೆ ಸಲ್ಲಿಸಲಾಗಿದೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಹಾಗೂ ವಿಕಲಚೇತನರ ಮತ್ತು ಹಿರಿಯ ನಾಗರಿಕರ ಸಬಲೀಕರಣ ಸಚಿವ ಲಕ್ಷ್ಮಿ ಹೆಬ್ಬಾಳ್ಳರ್ ತಿಳಿಸಿದ್ದಾರೆ.
ಶುಕ್ರವಾರ ವಿಧಾನ ಪರಿಷತ್ತಿನಲ್ಲಿ ಸದಸ್ಯ ಜವರಾಯಗೌಡ ಅವರ ಪ್ರಶ್ನೆಗೆ ಉತ್ತರಿಸಿದ ಅವರು, ಹೊಸದಾಗಿ ಅಂಗನವಾಡಿ ಕೇಂದ್ರ ಪ್ರಾರಂಭಿಸಲು ಕೇಂದ್ರ ಸರ್ಕಾರದ ಅನುಮೋದನೆ ಅವಶ್ಯವಿದೆ. ಏಕೆಂದರೆ ಅಂಗನವಾಡಿ ಕೇಂದ್ರದಲ್ಲಿ ಫಲಾನುಭವಿಗಳಿಗೆ ಪೂರೈಸಲಾಗುವ ಪೂರಕ ಪೌಷ್ಟಿಕ ಆಹಾರ ಯೋಜನೆ ಯಡಿ ಹಂಚಿಕೆ ಅನುದಾನದಲ್ಲಿ ಕೇಂದ್ರದ ಪಾಲು ಶೇ 20ರಷ್ಟು ಇರುತ್ತದೆ.
ಅಂಗನವಾಡಿ ಕಾರ್ಯ ಕರ್ತೆಯರ ಮತ್ತು ಸಹಾಯಕಿಯರ ಗೌರವಧನ ಪಾವತಿಯಲ್ಲಿ ಆಡಳಿತ ವೆಚ್ಚದಡಿ ಅನುದಾನ ಹಂಚಿಕೆಯಲ್ಲಿ ಕೇಂದ್ರ ಸರ್ಕಾರದ ಪಾಲು ಶೇ 30ರಷ್ಟಿರುತ್ತದೆ. ಮುಂದುವರೆದು ಸಬ್ಸಿಡಿ ದರದಲ್ಲಿ ಅಕ್ಕಿ ಮತ್ತು ಗೋಧಿಯನ್ನು ಸಹ ಕೇಂದ್ರ ಸರ್ಕಾರವು ರಾಜ್ಯಗಳಿಗೆ ಹಂಚಿಕೆ ಮಾಡುತ್ತದೆ ಎಂದು ತಿಳಿಸಿದ್ದಾರೆ.
ಸದ್ಯ ಕರ್ನಾಟಕ ರಾಜ್ಯದಲ್ಲಿ ಕೇಂದ್ರ ಸರ್ಕಾರದ ಅನುಮೋದಿತ 65931 ಅಂಗನವಾಡಿ ಕೇಂದ್ರಗಳು ವತಿಯಿಂದ ಅನುದಾನಿತ 3988 ಅಂಗನವಾಡಿ ಕೇಂದ್ರಗಳು ಕಾರ್ಯ ನಿರ್ವಹಿಸುತ್ತಿವೆ. ಸದರಿ 3988 ಅಂಗನವಾಡಿ ಕೇಂದ್ರಗಳಿಗೆ ಕೇಂದ್ರ ಸರ್ಕಾರದ ಅನುಮೋದನೆಗಾಗಿ ಪ್ರಸ್ತಾವನೆಯನ್ನು ಸಲ್ಲಿಸಲಾಗಿದೆ ಎಂದರು.
ರಾಜ್ಯ ಸರ್ಕಾರದ ರಾಜ್ಯದಲ್ಲಿ ಸ್ವಂತ ಕಟ್ಟಡವಿಲ್ಲದ ಅಂಗನವಾಡಿ ಕೇಂದ್ರಗಳಿಗೆ ಹೊಸದಾಗಿ ಕಟ್ಟಡ ನಿರ್ಮಿಸಲು ಕಳೆದ 2 ವರ್ಷಗಳಲ್ಲಿ ರೂ. 22,923 ಲಕ್ಷ ಅನುದಾನ ಬಿಡುಗಡೆಯಾಗಿರುತ್ತದೆ. ಒಟ್ಟು 337 ಅಂಗನವಾಡಿ ಕಟ್ಟಡಗಳ ಕಾಮಗಾರಿ ಪೂರ್ಣಗೊಂಡಿದೆ ಎಂದು ಸಚಿವರು ವಿವರಿಸಿದರು.



