ರಾಮದುರ್ಗ : ಸ್ಥಳೀಯರಿಗೆ ಅನುಕೂಲವಾಗುವ ನಿಟ್ಟಿನಲ್ಲಿ ತಾಲೂಕಾ ಆಸ್ಪತ್ರೆ ಮೇಲ್ದರ್ಜೆಗೆರಿಸುವ ಉದ್ದೇಶದಿಂದ ನೂತನವಾಗಿ 100 ಹಾಸಿಗೆಗಳ ನಿರ್ಮಾಣ ಮಾಡಲಾಗಿದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಸಚಿವ ದಿನೇಶ ಗುಂಡುರಾವ್ ಹೇಳಿದರು.
ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಸಂಯುಕ್ತಾಶ್ರಯದಲ್ಲಿ ಸೋಮವಾರ ರಾಮದುರ್ಗ ತಾಲೂಕು ಸಾರ್ವಜನಿಕ ಆಸ್ಪತ್ರೆಯ ಆವರಣದಲ್ಲಿ ನಡೆದ 100 ಹಾಸಿಗೆಗಳ ನಿರ್ಮಾಣ ಕಾಮಗಾರಿಯ ಶಂಕುಸ್ಥಾಪನೆ ನೆರವೇರಿಸಿ ಅವರು ಮಾತನಾಡಿದರು.
ನುಡಿದಂತೆ ನಡೆದ ಸರ್ಕಾರ ಜನಪರ ಕಾರ್ಯಕ್ರಮಗಳನ್ನು ನೀಡುತ್ತಿದೆ. ತಾಲೂಕು ಸಾರ್ವಜನಿಕ ಆಸ್ಪತ್ರೆಯ 100 ಹಾಸಿಗೆಗಳ ನಿರ್ಮಾಣ ರಾಮದುರ್ಗ ತಾಲೂಕಿಗೆ ಅತ್ಯವಶ್ಯವಾಗಿದೆ. ಸ್ಥಳೀಯವಾಗಿ ಹೆಚ್ಚಿನ ವೈದ್ಯಕೀಯ ಸೇವೆ ಸಾರ್ವಜನಿಕರಿಗೆ ಸಿಗುತ್ತಿದೆ ಎಂದು ಹೇಳಿದರು..
ರಾಜ್ಯದಲ್ಲಿ ಸಾಕಷ್ಟು ಹೊಸ ಬಸ್ ಬಿಡುಗಡೆ ಮಾಡಲಾಗಿದೆ. ಪಂಚ ಗ್ಯಾರಂಟಿ ಯೋಜನೆಗಳ ಅನುಷ್ಠಾನದ ಜೊತೆಗೆ ಎಲ್ಲಾ ಇಲಾಖೆಗಳ ಅಭಿವೃದ್ಧಿ ಕಾಮಗಾರಿಗಳನ್ನು ಕೈಗೊಳ್ಳಲಾಗುತ್ತಿದೆ. ಪುನೀತ್ ರಾಜಕುಮಾರ ಹೃದಯ ಜ್ಯೋತಿ, ಟೆಲಿ ಐಸಿಯು, ಗೃಹ ಆರೋಗ್ಯ ಯೋಜನೆ ಕೂಡ ಜಾರಿಯಲ್ಲಿದೆ. ಸ್ಥಳೀಯ ಶಾಸಕರ ಬೇಡಿಕೆಯಂತೆ ಆಸ್ಪತ್ರೆ ನಿರ್ಮಿಸಲು ಅಗತ್ಯವಿರುವ 33 ಕೋಟಿ ಅನುದಾನ ಬಿಡುಗಡೆ ಮಾಡಲಾಗುವುದು ಸಚಿವ ದಿನೇಶ್ ಗುಂಡೂರಾವ್ ಹೇಳಿದರು.
ಈ ಒಂದು ಕಾರ್ಯಕ್ರಮದಲ್ಲಿ ಕರ್ನಾಟಕ ವಿಧಾನಸಭೆ ಸರ್ಕಾರಿ ಮುಖ್ಯ ಸಚೇತಕರಾದ ಅಶೋಕ ಮ. ಪಟ್ಟಣ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ವಿಭಾಗೀಯ ಜಂಟಿ ನಿರ್ದೇಶಕರಾದ ಡಾಕ್ಟರ್. ಪುಷ್ಪಾ ಎಚ್. ಆರ್, ಧಾರವಾಡ ಕಾರ್ಯನಿರ್ವಾಹಕ ಅಭಿಯಂತರರು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಇಂಜಿನಿಯರಿಂಗ್ ವಿಭಾಗದ ಮಹಾಂತೇಶ ಕೆ, ಕೆ.ಎಸ್.ಆರ್.ಟಿ.ಸಿ ರಾಜ್ಯ ಉಪಾಧ್ಯಕ್ಷ ಸುನೀಲ ಹನುಮಣ್ಣವರ, ಜಿಲ್ಲಾ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಜಿಲ್ಲಾಧ್ಯಕ್ಷ ವಿನಯ ನಾವಲಗಟ್ಟಿ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಈಶ್ವರ ಗಡಾದ, ತಾಲೂಕಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿಗಳಾದ ಡಾಕ್ಟರ್ ನವೀನ್ ನಿಜಗುಳಿ, ರಾಮದುರ್ಗ ತಾಲೂಕಾ ಪಂಚಾಯತ ಕಾರ್ಯನಿರ್ವಾಹಕ ಅಧಿಕಾರಿಗಳು ಬಸವರಾಜ ವಾಯ್. ಐನಾಪುರ, ರಾಮದುರ್ಗ ತಾಲೂಕಾ ದಂಡಾಧಿಕಾರಿಗಳಾದ ಪ್ರಕಾಶ ಹೊಳೆಪ್ಪಗೋಳ
ಸೇರಿದಂತೆ ಆರೋಗ್ಯ ರಕ್ಷಣಾ ಸಮಿತಿಯ ಸದಸ್ಯರು ಸಮಾರಂಭದಲ್ಲಿ ಉಪಸ್ಥಿತರಿದ್ದರು.



