ಬೆಳಗಾವಿ ಜಿಲ್ಲೆಯ ಮುನವಳ್ಳಿಯಲ್ಲಿ ವೃದ್ಧೆಯೊಬ್ಬರನ್ನು ನಿರ್ಜನ ಪ್ರದೇಶದಲ್ಲಿ ಬಿಟ್ಟುಹೋದ ಅಮಾನವೀಯ ಘಟನೆ ಮಾಧ್ಯಮಗಳಲ್ಲಿ ವರದಿಯಾಗಿದೆ. ಈ ಕುರಿತು ತಕ್ಷಣವೇ ಸ್ಪಂದಿಸಿರುವ ನಿಕಟಪೂರ್ವ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಅವರು, ವೃದ್ಧೆಗೆ ಸೂಕ್ತ ಚಿಕಿತ್ಸೆ ಹಾಗೂ ರಕ್ಷಣೆ ನೀಡುವಂತೆ ಖಡಕ್ ನಿರ್ದೇಶನ ನೀಡಿದ್ದಾರೆ.
ಸವದತ್ತಿ ತಾಲೂಕಿನ ಮುನವಳ್ಳಿ ಹೊರವಲಯದಲ್ಲಿ ಅನಾರೋಗ್ಯದಿಂದ ಬಳಲುತ್ತಿದ್ದ ವೃದ್ಧ ಮಹಿಳೆಯನ್ನು ನಿರ್ಜನ ಪ್ರದೇಶದಲ್ಲಿ ಕೈಬಿಟ್ಟಿರುವ ಘಟನೆ ತೀವ್ರ ಕಳವಳ ಮೂಡಿಸಿದೆ. ತಮ್ಮ ಬಿಡುವಿಲ್ಲದ ವೇಳಾಪಟ್ಟಿಯ ನಡುವೆಯೂ ಈ ಘಟನೆಯನ್ನು ಗಂಭೀರವಾಗಿ ಪರಿಗಣಿಸಿರುವ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ನಿಕಟಪೂರ್ವ ಸಚಿವರಾದ ಲಕ್ಷ್ಮೀ ಹೆಬ್ಬಾಳ್ಕರ್ ಅವರು ತೀವ್ರ ದುಃಖ ವ್ಯಕ್ತಪಡಿಸಿದ್ದಾರೆ. ತಕ್ಷಣವೇ ಕಾರ್ಯಪ್ರವೃತ್ತರಾಗುವಂತೆ ಬೆಳಗಾವಿ ಜಿಲ್ಲಾಧಿಕಾರಿಗಳು, ಪೊಲೀಸ್ ಆಯುಕ್ತರು ಹಾಗೂ ಪೊಲೀಸ್ ವರಿಷ್ಠಾಧಿಕಾರಿಗಳಿಗೆ ಆದೇಶಿಸಿರುವ ಅವರು, ವೃದ್ಧೆಗೆ ಅಗತ್ಯ ವೈದ್ಯಕೀಯ ಚಿಕಿತ್ಸೆ, ರಕ್ಷಣೆ ಮತ್ತು ಪುನರ್ವಸತಿ ಕಲ್ಪಿಸಲು ಸೂಚಿಸಿದ್ದಾರೆ. ಈ ಪ್ರಕರಣದಲ್ಲಿ ಯಾವುದೇ ಕಾನೂನು ಉಲ್ಲಂಘನೆ ಅಥವಾ ನಿರ್ಲಕ್ಷ್ಯ ಕಂಡುಬಂದಲ್ಲಿ ಸಂಬಂಧಪಟ್ಟವರ ವಿರುದ್ಧ ಕಠಿಣ ಕಾನೂನು ಕ್ರಮ ಜರುಗಿಸುವಂತೆ ತಾಕೀತು ಮಾಡಿದ್ದು, ಇದಕ್ಕೆ ಸಕಾರಾತ್ಮಕವಾಗಿ ಸ್ಪಂದಿಸಿರುವ ಬೆಳಗಾವಿ ಜಿಲ್ಲಾಧಿಕಾರಿಗಳು ಸೂಕ್ತ ಕ್ರಮ ಕೈಗೊಳ್ಳುವ ಭರವಸೆ ನೀಡಿದ್ದಾರೆ.



