ಬೆಳಗಾವಿ, ಮತದಾರರ ಪಟ್ಟಿಗಳ ವಿಶೇಷ ಸಮಗ್ರ ಪರಿಷ್ಕರಣೆ ಕಾರ್ಯದಲ್ಲಿ ಯಾವುದೇ ಲೋಪಗಳಿಗೆ ಆಸ್ಪದ ನೀಡದೆ ಪಾರದರ್ಶಕತೆಯಿಂದ ಕೈಗೊಳ್ಳುವಂತೆ ಕಾರ್ಯದರ್ಶಿಗಳು ಸಹಕಾರ ಇಲಾಖೆ ಹಾಗೂ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿಗಳಾದ ಸಂಜಯ ಶೆಟ್ಟಣ್ಣವರ ಅವರು ಸೂಚಿಸಿದರು.
ಜಿಲ್ಲಾ ಪಂಚಾಯತ ಸಭಾಂಗಣದಲ್ಲಿ ಶನಿವಾರ ಜರುಗಿದ ವಿವಿಧ ಇಲಾಖೆಗಳ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಮತದಾರರ ಪಟ್ಟಿಗಳ ವಿಶೇಷ ಸಮಗ್ರ ಪರಿಶೀಲನೆ ಪ್ರಕ್ರಿಯೆ ರಾಜ್ಯಾದ್ಯಂತ ಪ್ರಾರಂಭವಾಗಿದ್ದು, ಬೆಳಗಾವಿ ಜಿಲ್ಲೆಯಲ್ಲಿ ಜೂನ್ 30 ರಿಂದ ಅಕ್ಟೋಬರ್ 7 ರವರೆಗೆ ಜರುಗಲಿರುವ ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ ಕಾರ್ಯಕ್ಕೆ ನಿಯೋಜಿತ ಅಧಿಕಾರಿ, ಸಿಬ್ಬಂದಿಗಳು ಪರಿಷ್ಕರಣೆ ಕಾರ್ಯದಲ್ಲಿ ಅತೀ ಜಾಗರೂಕತೆಯಿಂದ ತಮ್ಮ ಕಾರ್ಯವನ್ನು ನಿರ್ವಹಿಸಬೇಕು ಎಂದರು.
ಮತದಾರರ ಪಟ್ಟಿಗಳ ವಿಶೇಷ ಸಮಗ್ರ ಪರಿಶೀಲನಾ ಕಾರ್ಯದಲ್ಲಿ ಯಾವುದೇ ಗೊಂದಲಗಳಿಗೆ ಆಸ್ಪದ ನೀಡಬಾರದು. ಈ ಕಾರ್ಯದಲ್ಲಿ ಯಾವೊಬ್ಬ ಅರ್ಹ ಮತದಾರರ ಹೆಸರು ಮತದಾರರ ಪಟ್ಟಿಯಿಂದ ಬಿಟ್ಟು ಹೋಗದಂತೆ ನಿಗಾವಹಿಸಿ ಅತ್ಯಂತ ಜವಾಬ್ದಾರಯುತವಾಗಿ ಕಾರ್ಯನಿರ್ವಹಿಸಬೇಕು.
ಮತದಾರರ ಪಟ್ಟಿ ಪರಿಷ್ಕರಣೆ ಸಂದರ್ಭದಲ್ಲಿ ಮತದಾರರ ಪಟ್ಟಿಯಲ್ಲಿ ಹೆಸರನ್ನು ಸೇರಿಸಲು, ಪಟ್ಟಿಯಿಂದ ಹೆಸರನ್ನು ಕೈಬಿಡಲು ಚುನಾವಣಾ ಆಯೋಗದ ಮಾರ್ಗಸೂಚಿಗಳನ್ವಯ ಕಾರ್ಯನಿರ್ವಹಿಸಬೇಕು. ಈ ಕುರಿತು ನಿಯೋಜಿತ ಅಧಿಕಾರಿ, ಸಿಬ್ಬಂದಿಗಳಿಗೆ ತರಬೇತಿ ನೀಡಲಾಗಿದ್ದು ಅರ್ಹ ಮತದಾರರಿಗೆ ಈ ಕುರಿತು ತಿಳುವಳಿಕೆ ನೀಡಿ ಅನವಶ್ಯಕ ಗೊಂದಲಗಳಾಗದಂತೆ ನಿಗಾವಹಿಸಬೇಕು ಎಂದರು.
ಜಿಲ್ಲೆಗೆ ದೊಡ್ಡ ಕೈಗಾರಿಕೆಗಳು ಬರಲು ಆಸಕ್ತಿ ಹೊಂದಿದ್ದು, ಕೈಗಾರಿಕೆಗಳಿಗೆ ಬೇಕಾದಂತಹ ಭೂಮಿ ಹಾಗೂ ಇನ್ನಿತರ ಅಗತ್ಯ ಸೌಲಭ್ಯಗಳನ್ನು ತ್ವರಿತವಾಗಿ ಒದಗಿಸಬೇಕು. ಜಿಲ್ಲೆಯಲ್ಲಿ ಬೃಹತ ಉದ್ದಿಮೆಗಳು ಪ್ರಾರಂಭಿಸುವ ಕುರಿತಹ ಸಲ್ಲಿಸಲಾದ ಪ್ರಸ್ತಾವನೆಗಳು ಯಾವ ಹಂತದಲ್ಲಿವೆ ಎಂಬುದರ ಕುರಿತು ವರದಿ ಸಲ್ಲಿಸಲು ಸೂಚಿಸಿದರು.
ಮಳೆ ವಿಳಂಬ-ಅಗತ್ಯ ಮುನ್ನೆಚ್ಚರಿಕೆಗೆ ನಿರ್ದೇಶನ:
ಪ್ರಸಕ್ತ ಸಾಲಿನ ಮುಂಗಾರು ತಡವಾಗಿದ್ದು ಜಿಲ್ಲೆಯ ಗ್ರಾಮೀಣ ಪ್ರದೇಶಗಳಲ್ಲಿ ಕುಡಿಯುವ ನೀರಿನ ಅಭಾವವಾಗದಂತೆ ಕ್ರಮ ವಹಿಸಬೇಕು. ಜೊತೆಗೆ ಬಿತ್ತನೆ ಹಂಗಾಮು ಪ್ರಾರಂಭವಾಗಿದ್ದು ರೈತರಿಗೆ ಬೇಕಾದಂತಹ ಬಿತ್ತನೆ ಬೀಜ ಹಾಗೂ ರಸಗೊಬ್ಬರಗಳ ಕೊರತೆ ಆಗದಂತೆ ನಿಗಾವಹಿಸಲು ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿಗಳಾದ ಸಂಜಯ ಶೆಟ್ಟಣ್ಣವರ ಅವರು ಸೂಚಿಸಿದರು.
ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ಅವರು ಮಾತನಾಡಿ ಮತದಾರರ ಪಟ್ಟಿಗಳ ವಿಶೇಷ ಸಮಗ್ರ ಪರಿಷ್ಕರಣೆಯಲ್ಲಿ ಜಿಲ್ಲೆಯು ಮ್ಯಾಪಿಂಗ್ ಕಾರ್ಯದಲ್ಲಿ ಉತ್ತಮ ಪ್ರಗತಿ ಸಾಧಿಸಿದೆ ಎಂದರು.
ಜಿಲ್ಲೆಯ 18 ವಿಧಾನ ಸಭಾ ಕ್ಷೇತ್ರಗಳ ಮತದಾರರ ಪಟ್ಟಿಯನ್ನು ಮ್ಯಾಪಿಂಗ್ ಮಾಡಲಾಗಿದ್ದು, 41,22,869 ಮತದಾರರ ಪೈಕಿ 38,22,990 ಮತದಾರರ ಮ್ಯಾಪಿಂಗ್ ಕಾರ್ಯ ಪೂರ್ಣಗೊಂಡಿದ್ದು ಮ್ಯಾಪಿಂಗ್ ಕಾರ್ಯದಲ್ಲಿ ಜಿಲ್ಲೆಯಲ್ಲಿ ಪ್ರತಿಶತ 93 ರಷ್ಟು ಸಾಧಿಸಲಾಗಿದೆ.
ಜಿಲ್ಲೆಯಲ್ಲಿ ಬೃಹತ ಕೈಗಾರಿಕೆಗಳ ಸ್ಥಾಪನೆಗೆ ಪ್ರಸ್ತಾವನೆ ಸಲ್ಲಿಸಿದ ವಿವಿಧ ಕೈಗಾರಿಕೊದ್ಯಮಗಳ ಪ್ರತಿನಿಧಿಗಳೊಂದಿಗೆ ಪ್ರಸ್ತಾವನೆಯ ಸ್ಥಿತಿಗತಿಗಳ ಕುರಿತು ಚರ್ಚಿಸಿ ವರದಿ ನೀಡಲು ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ಅವರು ತಿಳಿಸಿದರು.
ಸಭೆಯಲ್ಲಿ ಪೋಲಿಸ್ ಆಯುಕ್ತ ಭೋರಸೆ ಗುಲಾಬರಾವ್ ಭೂಷಣ, ಜಿಲ್ಲಾ ಪಂಚಾಯತ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ರಾಹುಲ ಶಿಂಧೆ, ಪ್ರಶಿಕ್ಷಣಾರ್ಥಿ ಆಯ್.ಎ.ಎಸ್. ಅಧಿಕಾರಿ ರೋಹಿತ ಸಿಂಗ್, ಅಪರ ಜಿಲ್ಲಾಧಿಕಾರಿ ವಿಜಯಕುಮಾರ ಹೊನಕೇರಿ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು ಹಾಜರಿದ್ದರು.



