ರಾಯಚೂರು ನಗರದ ಕೃಷಿ ವಿಶ್ವವಿದ್ಯಾಲಯದ ಜಗಜ್ಯೋತಿ ಬಸವೇಶ್ವರ ಸಭಾಂಗಣದಲ್ಲಿ ಶನಿವಾರದಂದು ರಾಯಚೂರು ಜಿಲ್ಲೆಯ ಎಲ್ಲಾ ಇಲಾಖೆಗಳ ಜಿಲ್ಲಾ ಮಟ್ಟದ ಅಧಿಕಾರಿಗಳು ಹಾಗೂ ಸಾರ್ವಜನಿಕ ಮಾಹಿತಿ ಅಧಿಕಾರಿಗಳಿಗೆ ಮಾಹಿತಿ ಹಕ್ಕು ಕಾಯ್ದೆ ಕುರಿತು ಕರ್ನಾಟಕ ಮಾಹಿತಿ ಆಯೋಗದ ರಾಜ್ಯ ಮಾಹಿತಿ ಆಯುಕ್ತರೊಂದಿಗೆ ಕಾರ್ಯಾಗಾರ ಹಾಗೂ ಸಂವಾದ ಕಾರ್ಯಕ್ರಮಕ್ಕೆ
ಕರ್ನಾಟಕ ಮಾಹಿತಿ ಆಯೋಗದ ಕಲಬುರಗಿ ಪೀಠದ ರಾಜ್ಯ ಮಾಹಿತಿ ಆಯುಕ್ತರಾದ ಬಿ.ವೆಂಕಟ್ ಸಿಂಗ್
ಚಾಲನೆ ನೀಡಿ ಅವರು ಮಾತನಾಡಿದರು.
ಮಾಹಿತಿ ಹಕ್ಕು ಕಾಯ್ದೆಯಡಿ ಯಾವುದೇ ಅಧಿಕಾರಿ ಮತ್ತು ಸಿಬ್ಬಂದಿಗಳ ವೈಯಕ್ತಿಕ ಮಾಹಿತಿ ನೀಡಲು ಬರುವುದಿಲ್ಲ. ಸಾರ್ವಜನಿಕ ಹಿತಾಸಕ್ತಿಗೆ ಪೂರಕವಾದ ಅರ್ಜಿಗಳಿದ್ದರೆ ಮಾಹಿತಿ ನೀಡಬೇಕು. ಯಾವುದೇ ಅಧಿಕಾರಿ ಸಮಂಜಸ ಕಾರಣವಿಲ್ಲದೆ ಮಾಹಿತಿ ನೀಡಿದರೆ ಅಥವಾ ದುರುದ್ದೇಶದಿಂದ ತಪ್ಪಾಗಿ ಮಾಹಿತಿ ಕೊಟ್ಟರೆ ದಂಡ ಪಾವತಿಸಬೇಕಾಗುತ್ತದೆ. ಜತೆಗೆ ಶಿಸ್ತುಕ್ರಮ ಎದುರಿಸಬೇಕಾಗುತ್ತದೆ ಎಂದರು.
ಸಂವಿಧಾನದ ವಿಧಿ 19ರಲ್ಲಿ ಸಂಸತ್ತಿನ ಉಭಯ ಸದನಗಳಲ್ಲಿ ಮಾಹಿತಿ ಹಕ್ಕು ಕಾಯ್ದೆ ಜಾರಿಯಾಗಿ 20 ವರ್ಷಗಳಾಗಿದ್ದು, ಅದೇ ವರ್ಷ ಕರ್ನಾಟಕದಲ್ಲಿ ಮಾಹಿತಿ ಹಕ್ಕು ಕಾಯ್ದೆ ಜಾರಿಯಾಗಿದ್ದು, ಅದರ ಕಾಯ್ದೆಯ ಅಂಶಗಳನ್ನು ಅಧಿಕಾರಿಗಳು ಸರಿಯಾಗಿ ತಿಳಿಯದ ಕಾರಣ, ಮಾಹಿತಿ ಕೊರತೆಯಿಂದ ಜಿಲ್ಲೆಯಲ್ಲಿ ಹೆಚ್ಚಿನ ಪ್ರಮಾಣದಲ್ಲಿ ಪ್ರಕರಣಗಳ ಬಾಕಿ ಉಳಿದಿವೆ ಎಂದರು.
ಕಲ್ಯಾಣ ಕರ್ನಾಟಕ ಭಾಗದ ಎಲ್ಲಾ ಜಿಲ್ಲೆಗಳಲ್ಲಿ ಮಾಹಿತಿ ಹಕ್ಕು ಕಾಯ್ದೆ ಕುರಿತು ಕಾರ್ಯಾಗಾರ ನಡೆಸಲಾಗಿದೆ. ರಾಯಚೂರು ಜಿಲ್ಲೆಯಲ್ಲಿ ಸುಮಾರು 2 ಸಾವಿರಕ್ಕೂ ಹೆಚ್ಚು ಪ್ರಕರಣಗಳ ಬಾಕಿ ಇವೆ. ನಿಗದಿತ ಕಾಲದಲ್ಲಿ ಸಾರ್ವಜನಿಕ ಮಾಹಿತಿ ಅಧಿಕಾರಿಯು ಮಾಹಿತಿ ನೀಡಲು ವಿಫಲವಾದಲ್ಲಿ ಅಂತಹ ಅಧಿಕಾರಿ ವಿರುದ್ಧ ದಂಡ ಹಾಗೂ ಸೂಕ್ತ ಕ್ರಮ ಜರುಗಿಸಲು ಆಯೋಗಕ್ಕೆ ಅಧಿಕಾರವಿದೆ ಎಂದರು.
ಸರ್ಕಾರಿ ಹುದ್ದೆ ಎಲ್ಲರಿಗೂ ಸಿಗುವುದಿಲ್ಲ. ಸಿಕ್ಕವರು ಸಾರ್ವಜನಿಕರಿಗೆ ಉತ್ತಮ ಕೆಲಸ ಕಾರ್ಯಗಳ ಜೊತೆಗೆ ಸಾರ್ವಜನಿಕ ಕೋರಿರುವ ಮಾಹಿತಿಯನ್ನು ನಿಗದಿತ ಸಮಯದಲ್ಲಿ ನೀಡಬೇಕು. ಅಲ್ಲದೆ ದೇಶದ ವಿವಿಧ ರಾಜ್ಯಗಳ ಹೈಕೋರ್ಟ್ ಗಳು ಮಾಹಿತಿ ಹಕ್ಕು ಕುರಿತು ಆದೇಶ ನೀಡಿವೆ. ಹಾಗೂ ಕರ್ನಾಟಕ ಸರ್ಕಾರದ ಕಾರ್ಯದರ್ಶಿಗಳು ಕಾಲಕಾಲಕ್ಕೆ ಸುತ್ತೋಲೆ ಹೊರಡಿಸಿದ್ದಾರೆ. ಅವುಗಳನ್ನು ಎಲ್ಲ ಇಲಾಖೆಯ ಅಧಿಕಾರಿಗಳು ಪಾಲಿಸಬೇಕು. ಶೇ.90ರಷ್ಟು ಸರಕಾರಿ ಕಚೇರಿಗಳಲ್ಲಿ ಪೋರಂ ಎ, ಪೋರಂ ಬಿ, ಕುರಿತು ನಾಮ ಫಲಕ ಹೊಂದಿರುವುದಿಲ್ಲ. ಕಲ್ಯಾಣ ಕರ್ನಾಟಕ ಭಾಗದಲ್ಲಿ 6 ಸಾವಿರಕ್ಕೂ ಹೆಚ್ಚು ಅರ್ಜಿಗಳು ಆಯೋಗದ ಮುಂದಿವೆ. ಅವುಗಳನ್ನು ಕೂಡಲೇ ವಿಲೇವಾರಿ ಮಾಡಲು ಆಯೋಗವು ಸೂಕ್ತ ಕ್ರಮವಹಿಸಿದೆ ಎಂದರು.
ನಿಗದಿತ ಸಮಯದಲ್ಲಿ ನಡೆಯುವ ಕೆಡಿಪಿ ಸಭೆಯಲ್ಲಿ ಆರ್.ಟಿ.ಐ ಅರ್ಜಿಗಳ ಪ್ರಗತಿ ಪರಿಶೀಲನೆ ಸಭೆಯನ್ನು ಸಂಬಂಧಿಸಿದ ಅಧಿಕಾರಿಗಳು ಮಾಡಬೇಕು. ಸಾರ್ವಜನಿಕ ಮಾಹಿತಿ ಅಧಿಕಾರಿಗಳ ಹೆಸರು ಹಾಗೂ ಮಾಹಿತಿಯನ್ನು ಪ್ರದರ್ಶನ ಮಾಡಬೇಕು. ಸಾರ್ವಜನಿಕ ಸ್ಥಳಗಳಲ್ಲಿ ಸರಕಾರದ ಸುತ್ತೋಲೆ ಪ್ರಕಾರ ಕಡ್ಡಾಯವಾಗಿ ಹಾಕಬೇಕೆಂದರು.
ಜಿಲ್ಲೆಯ ಜಿಲ್ಲಾ ಪಂಚಾಯತ್ ಅಡಿಯಲ್ಲಿ ಹೆಚ್ಚಿನ ಪ್ರಮಾಣದಲ್ಲಿ ಅರ್ಜಿ ಸಲ್ಲಿಕೆಯಾಗಿವೆ. ಆಯಾ ಕಾಲದಲ್ಲಿ ಮಾಹಿತಿ ನೀಡಬೇಕು. ಮಾಹಿತಿ ನೀಡಿದಲ್ಲಿ ಮೇಲೆ ಮನವಿಗೆ ಬರುವ ಅವಶ್ಯಕತೆ ಇರುವುದಿಲ್ಲ. ಅಧಿಕಾರಿಗಳಲ್ಲಿ ಸಾಕಷ್ಟು ಗೊಂದಲವಿದೆ. ಅವುಗಳನ್ನು ಮುಕ್ತ ಸಂವಾದದಲ್ಲಿ ಬಗೆಹರಿಸಿಕೊಳ್ಳಬೇಕೆಂದರು.
ಜಿಲ್ಲಾಧಿಕಾರಿ ಪೂವಿತಾ ಎಸ್. ಅವರು ಮಾತನಾಡಿ, ಮಾಹಿತಿ ಹಕ್ಕು ಕಾಯ್ದೆಯಿಂದ ಆನೇಕ ಸ್ಕ್ಯಾಮ್ ಬೆಳಕಿಗೆ ಬಂದಿವೆ. ನಾಗರಿಕರು ಕೇಳುವ ಮಾಹಿತಿಯನ್ನು ಸರಿಯಾಗಿ ನೀಡಬೇಕು. ನಿಗದಿತ ದಿನಗಳ ಒಳಗೆ ಮಾಹಿತಿ ನೀಡಬೇಕು. ಎಂಬ ನಿಯಮವಿದೆ. ಜನರನ್ನು ಕಚೇರಿಗೆ ಅಲೆದಾಡಿಸುವುದರ ಬದಲು ಆದಷ್ಟು ಬೇಗನೆ ಮಾಹಿತಿ ನೀಡಬೇಕು. ಜಿಲ್ಲೆಯಲ್ಲಿ ಜನರು ಈ ಕಾಯ್ದೆಯಡಿ ಕೇಳುವ ಮಾಹಿತಿಯನ್ನು ಕೂಡಲೇ ಕೊಡುವ ನಿಟ್ಟಿನಲ್ಲಿ ಅಧಿಕಾರಿಗಳು ಕೆಲಸ ಮಾಡಬೇಕು ಎಂದು ಸೂಚಿಸಿದರು.
ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಈಶ್ವರ ಕುಮಾರ್ ಕಾಂದೂ ಅವರು ಮಾತನಾಡಿ, ಜಿಲ್ಲೆಯ ವಿವಿಧ ಗ್ರಾಮ ಪಂಚಾಯತಿಗಳಲ್ಲಿ ಬಾಕಿ ಇರುವ ಪ್ರಕರಣಗಳ ವಿಲೇವಾರಿಗೆ ಸೂಕ್ತ ಕ್ರಮವಹಿಸಲಾಗುತ್ತದೆ. ಮಾಹಿತಿ ಸಲ್ಲಿಕೆಗೆ ಕೋರಿ ಸಾರ್ವಜನಿಕರು ಸಲ್ಲಿಸುವ ಅರ್ಜಿಗಳಿಗೆ ನಿಗದಿತ ಅವಧಿಯೊಳಗೆ ಅಗತ್ಯ ಮಾಹಿತಿ ಒದಗಿಸುವುದು ಎಲ್ಲಾ ಇಲಾಖೆಗಳ ಮಾಹಿತಿ ಅಧಿಕಾರಿಗಳ ಕಡ್ಡಾಯ ಜವಾಬ್ದಾರಿಯಾಗಿದೆ. ಮಾಹಿತಿ ಹಕ್ಕು ಕಾಯ್ದೆ ಸಾರ್ವಜನಿಕ ಆಡಳಿತ ವ್ಯವಸ್ಥೆಯಲ್ಲಿ ಪಾರದರ್ಶಕತೆ ಮತ್ತು ಕಾನೂನಾತ್ಮಕವಾಗಿ ಸಾರ್ವಜನಿಕ ಕೆಲಸಗಳನ್ನು ಮಾಡಲು ಸಹಕಾರಿಯಾಗಿದೆ ಎಂದರು.
ಈ ಸಂದರ್ಭದಲ್ಲಿ ರಾಯಚೂರು ವಿಭಾಗದ ಸಹಾಯಕ ಆಯುಕ್ತ ಡಾ.ಹಂಪಣ್ಣ ಸಜ್ಜನ್, ಜಿಲ್ಲಾ ಪೊಲೀಸ್ ಹೆಚ್ಚುವರಿ ವರಿಷ್ಠಾಧಿಕಾರಿ ಹರೀಶ್ ಜಿ, ರಾಯಚೂರು ಮಹಾನಗರ ಪಾಲಿಕೆಯ ಆಡಳಿತ ವಿಭಾಗದ ಉಪ ಆಯುಕ್ತ ಶರಣಪ್ಪ ಸೇರಿದಂತೆ ಜಿಲ್ಲಾ ಹಾಗೂ ತಾಲೂಕು ಮಟ್ಟದ ಅಧಿಕಾರಿಗಳು ಮತ್ತು ಸಿಬ್ಬಂದಿಗಳು ಪಾಲ್ಗೊಂಡಿದ್ದರು.



