ಮಹಿಳಾ ದೌರ್ಜನ್ಯ ತಡೆ; ಜಿಲ್ಲಾ ಮಟ್ಟದ ಕಾರ್ಯಾಗಾರ : ಮಹಿಳೆಯರ ಸುರಕ್ಷತೆ ಪ್ರತಿಯೊಬ್ಬರ ಜವಾಬ್ದಾರಿ ನಾಗಲಕ್ಷ್ಮಿ ಚೌಧರಿ

WhatsApp Group Join Now

ಬೆಳಗಾವಿ ಮಹಿಳೆಯರು ಕೆಲಸ ಮಾಡುವ ಸ್ಥಳಗಳಲ್ಲಿ ಗೌರವ, ಘನತೆ ಹಾಗೂ ಸುರಕ್ಷತೆಯೊಂದಿಗೆ ಕಾರ್ಯನಿರ್ವಹಿಸಲು ಅನುಕೂಲಕರ ವಾತಾವರಣ ನಿರ್ಮಾಣವಾಗಬೇಕು. ಮಹಿಳೆಯರು ತಮ್ಮ ಹಕ್ಕುಗಳ ಅರಿವು ಪಡೆಯಬೇಕು. ಮಹಿಳೆಯರು ಯಾವುದೇ ಭಯ ಅಥವಾ ಮುಜುಗರವಿಲ್ಲದೆ ತಮ್ಮ ಸಮಸ್ಯೆಗಳನ್ನು ಮುಕ್ತವಾಗಿ ಹಂಚಿಕೊಳ್ಳುವ ಹಾಗೂ ಅಗತ್ಯ ನೆರವು ಪಡೆಯುವಂತಹ ವಾತಾವರಣವನ್ನು ನಿರ್ಮಿಸುವುದು ಎಲ್ಲರ ಜವಾಬ್ದಾರಿಯಾಗಿದೆ ಎಂದು ಕರ್ನಾಟಕ ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷರಾದ ನಾಗಲಕ್ಷ್ಮಿ ಚೌಧರಿ ತಿಳಿಸಿದರು.

ಕರ್ನಾಟಕ ರಾಜ್ಯ ಮಹಿಳಾ ಆಯೋಗ ಬೆಂಗಳೂರು, ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಬೆಳಗಾವಿ ಇವರುಗಳ ಸಂಯುಕ್ತಾಶ್ರಯದಲ್ಲಿ ಸುವರ್ಣ ಸೌಧದ ಸೆಂಟ್ರಲ್ ಹಾಲ್ ನಲ್ಲಿ ಸೋಮವಾರ (ಸೆ.07) ನಡೆದ ಮಹಿಳೆಯರ ಮೇಲಿನ ಲೈಂಗಿಕ ಕಿರುಕುಳ (ತಡೆಗಟ್ಟುವಿಕೆ, ನಿಷೇಧಿಸುವಿಕೆ ಮತ್ತು ನಿವಾರಿಸುವಿಕೆ) ಕಾಯ್ದೆ 2013ರ ಕುರಿತು ಜಿಲ್ಲಾ ಮಟ್ಟದ ಕಾರ್ಯಾಗಾರದಲ್ಲಿ ಅವರು ಮಾತನಾಡಿದರು.

ಮಹಿಳೆಯರ ಸುರಕ್ಷತೆ ಹಾಗೂ ಹಕ್ಕುಗಳ ರಕ್ಷಣೆಗೆ ರಾಜ್ಯ ಮಹಿಳಾ ಆಯೋಗದಿಂದ ಹಲವು ಕಾರ್ಯಕ್ರಮಗಳನ್ನು ಜಾರಿಗೆ ತರಲಾಗಿದೆ. ಮಹಿಳೆಯರಿಗೆ ಅಗತ್ಯ ನೆರವು ಒದಗಿಸುವ ನಿಟ್ಟಿನಲ್ಲಿ ಸಹಾಯವಾಣಿ 181, 112 ಹಾಗೂ ವಾಟ್ಸಾಪ್ ಮೂಲಕ ಸಹಾಯ ಸಂದೇಶ ಸೇರಿದಂತೆ ವಿವಿಧ ಸೌಲಭ್ಯಗಳನ್ನು ಕಲ್ಪಿಸಲಾಗಿದೆ. ಮಹಿಳೆಯರು ತಮಗಾಗುವ ಕಿರುಕುಳ, ಅನ್ಯಾಯ ಅಥವಾ ಇತರೆ ಸಮಸ್ಯೆಗಳ ಕುರಿತು ಆಯೋಗವನ್ನು ಸಂಪರ್ಕಿಸಿ ಸೂಕ್ತ ನೆರವು ಹಾಗೂ ಮಾರ್ಗದರ್ಶನ ಪಡೆಯಬಹುದಾಗಿದೆ ಎಂದು ಹೇಳಿದರು.

ಕಾರ್ಯಸ್ಥಳದಲ್ಲಿ ಮಹಿಳೆಯರಿಗೆ ಲೈಂಗಿಕ ಕಿರುಕುಳದಿಂದ ಮುಕ್ತವಾದ ವಾತಾವರಣ ಕಲ್ಪಿಸುವುದು ಅತ್ಯಂತ ಮಹತ್ವದ್ದಾಗಿದೆ. ಈ ನಿಟ್ಟಿನಲ್ಲಿ ಕಾರ್ಯಸ್ಥಳದಲ್ಲಿ ಮಹಿಳೆಯರ ಮೇಲಿನ ಲೈಂಗಿಕ ಕಿರುಕುಳ ತಡೆ ಕಾಯ್ದೆ (POSH—Prevention of Sexual Harassment) ಕುರಿತು ಅರಿವು ಮೂಡಿಸುವುದು ಅಗತ್ಯವಾಗಿದೆ.

ಪ್ರತಿಯೊಂದು ಸಂಸ್ಥೆಯಲ್ಲಿಯೂ POSH ಕಾಯ್ದೆಯ ನಿಯಮಗಳನ್ನು ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸುವ ಮೂಲಕ ಮಹಿಳೆಯರ ಗೌರವ, ಘನತೆ ಹಾಗೂ ಸುರಕ್ಷತೆಯನ್ನು ಕಾಪಾಡಬೇಕು ಎಂದು ತಿಳಿಸಿದರು.

ಮಹಿಳೆಯರ ರಕ್ಷಣೆ ಹಾಗೂ ಹಕ್ಕುಗಳಿಗಾಗಿ ಮಹಿಳೆಯರೇ ರೂಪಿಸಿದ ಸಂಸ್ಥೆಯೇ ಮಹಿಳಾ ಆಯೋಗವಾಗಿದೆ. ಬಾಲ್ಯ ವಿವಾಹ ತಡೆ ಹಾಗೂ ಹೆಣ್ಣು ಭ್ರೂಣಹತ್ಯೆ ನಿರ್ಮೂಲನೆ ಸೇರಿದಂತೆ ಮಹಿಳೆಯರು ಮತ್ತು ಹೆಣ್ಣುಮಕ್ಕಳ ಮೇಲಿನ ಅನ್ಯಾಯಗಳನ್ನು ತಡೆಯುವ ಉದ್ದೇಶದಿಂದ ಮಹಿಳಾ ಆಯೋಗದ ಅಗತ್ಯತೆ ಬಲವಾಗಿ ಮೂಡಿಬಂದಿತು.

ರಾಜಸ್ಥಾನದ ಮಹಿಳೆಯೊಬ್ಬರ ಪ್ರಯತ್ನವೂ ಮಹಿಳಾ ಆಯೋಗ ಸ್ಥಾಪನೆಯ ಚಿಂತನೆಗೆ ಪ್ರಮುಖ ಕಾರಣವಾಯಿತು. ಮಹಿಳೆಯರ ಹಕ್ಕುಗಳು ಹಾಗೂ ಸುರಕ್ಷತೆಯನ್ನು ಕಾಪಾಡುವ ನಿಟ್ಟಿನಲ್ಲಿ ಆಯೋಗವು ನಿರಂತರವಾಗಿ ಬದ್ಧತೆಯಿಂದ ಕಾರ್ಯನಿರ್ವಹಿಸುತ್ತಿದೆ ಎಂದು ನಾಗಲಕ್ಷ್ಮಿ ಚೌಧರಿ ಹೇಳಿದರು.

ಕಾರ್ಯಕ್ರಮದ ಸಂಪನ್ಮೂಲ ವ್ಯಕ್ತಿಗಳಾಗಿ ಆಗಮಿಸಿದ್ದ ಪ್ರಶಾಂತ ತುರಮುರಿ ಮಾತನಾಡಿ, ಕೆಲಸದ ಸ್ಥಳಗಳಲ್ಲಿ ಮಹಿಳೆಯರ ಮೇಲಿನ ಲೈಂಗಿಕ ಕಿರುಕುಳವನ್ನು ತಡೆಗಟ್ಟುವುದು, ಮಹಿಳೆಯರಿಗೆ ಸುರಕ್ಷಿತ ಹಾಗೂ ಗೌರವಯುತ ಕಾರ್ಯನಿರ್ವಹಣೆಯ ವಾತಾವರಣ ಕಲ್ಪಿಸುವುದು ಮತ್ತು ಲೈಂಗಿಕ ಕಿರುಕುಳಕ್ಕೆ ಸಂಬಂಧಿಸಿದ ದೂರುಗಳನ್ನು ಪರಿಣಾಮಕಾರಿಯಾಗಿ ಪರಿಹರಿಸುವುದು ಕಾರ್ಯಸ್ಥಳದಲ್ಲಿ ಮಹಿಳೆಯರ ಮೇಲಿನ ಲೈಂಗಿಕ ಕಿರುಕುಳ ತಡೆ ಕಾಯ್ದೆ (POSH) ಹಾಗೂ ಆಂತರಿಕ ದೂರು ಸಮಿತಿಯ ಪ್ರಮುಖ ಉದ್ದೇಶಗಳಾಗಿವೆ ಎಂದು ಹೇಳಿದರು.

ಮಹಿಳೆಯರು ತಮ್ಮ ಹಕ್ಕುಗಳ ಕುರಿತು ಅರಿವು ಹೊಂದುವುದರ ಜೊತೆಗೆ, ಕಾರ್ಯಸ್ಥಳದಲ್ಲಿ ಯಾವುದೇ ರೀತಿಯ ಲೈಂಗಿಕ ಕಿರುಕುಳ ಸಂಭವಿಸಿದಲ್ಲಿ ಅದನ್ನು ಮೌನವಾಗಿ ಸಹಿಸಿಕೊಳ್ಳದೆ ಸೂಕ್ತ ಮಾರ್ಗದಲ್ಲಿ ದೂರು ಸಲ್ಲಿಸುವ ಧೈರ್ಯ ಬೆಳೆಸಿಕೊಳ್ಳಬೇಕು.

ಸಂಸ್ಥೆಯಲ್ಲಿ ಉದ್ಯೋಗಿಗಳ ಸಂಖ್ಯೆ ಹತ್ತು ಅಥವಾ ಅದಕ್ಕಿಂತ ಹೆಚ್ಚು ಉದ್ಯೋಗಿಗಳನ್ನು ಹೊಂದಿರುವ ಪ್ರತಿಯೊಂದು ಸಂಸ್ಥೆಯಲ್ಲಿಯೂ ಆಂತರಿಕ ದೂರು ಸಮಿತಿ (Internal Complaints Committee–ICC) ರಚಿಸುವುದು ಕಡ್ಡಾಯವಾಗಿದೆ ಎಂದು ಪ್ರಶಾಂತ ತುರಮುರಿ ಅವರು ತಿಳಿಸಿದರು.

ಸಂಸ್ಥೆಯಲ್ಲಿ ಮಹಿಳಾ ಉದ್ಯೋಗಿಗಳು ಇಲ್ಲದ ಸಂದರ್ಭದಲ್ಲಿಯೂ ಕಾನೂನಿನ ಉದ್ದೇಶ ಹಾಗೂ ಸುಪ್ರೀಂ ಕೋರ್ಟ್‌ನ ನಿರ್ದೇಶನಗಳನ್ನು ಗಮನದಲ್ಲಿಟ್ಟುಕೊಂಡು ಅಗತ್ಯ ಕ್ರಮಗಳನ್ನು ಕೈಗೊಳ್ಳಬೇಕು. ಸಮಿತಿಯು ಕೇವಲ ಕಾಗದದ ಮೇಲಿನ ವ್ಯವಸ್ಥೆಯಾಗದೆ, ಮಹಿಳೆಯರಿಗೆ ವಿಶ್ವಾಸ ಮೂಡಿಸುವ ರೀತಿಯಲ್ಲಿ ಸಕ್ರಿಯವಾಗಿ ಕಾರ್ಯನಿರ್ವಹಿಸಬೇಕು ಎಂದು ಹೇಳಿದರು.

ಕಾರ್ಯಸ್ಥಳದಲ್ಲಿ ಲೈಂಗಿಕ ಕಿರುಕುಳವೆಂದರೆ ಕೇವಲ ಅಸಭ್ಯ ಮಾತುಗಳು ಅಥವಾ ದೈಹಿಕ ಕಿರುಕುಳಕ್ಕೆ ಸೀಮಿತವಾಗಿರುವುದಿಲ್ಲ. ಅನಗತ್ಯ ಸ್ಪರ್ಶ, ಅಶ್ಲೀಲ ಅಥವಾ ಅಸಮಂಜಸ ಸಂದೇಶಗಳ ಕಳುಹಿಸುವಿಕೆ, ಅಸಭ್ಯ ವರ್ತನೆ, ಲೈಂಗಿಕ ಸ್ವರೂಪದ ಟೀಕೆಗಳು, ಒತ್ತಡ ಹೇರುವುದು ಸೇರಿದಂತೆ ಮಹಿಳೆಯರ ಗೌರವಕ್ಕೆ ಧಕ್ಕೆ ಉಂಟುಮಾಡುವ ವಿವಿಧ ರೀತಿಯ ವರ್ತನೆಗಳು ಇದರ ವ್ಯಾಪ್ತಿಗೆ ಬರಬಹುದು.

ಈ ಕುರಿತು ಉದ್ಯೋಗಿಗಳು, ಸಂಸ್ಥೆಯ ಮುಖ್ಯಸ್ಥರು ಹಾಗೂ ದೂರು ಸಮಿತಿಯ ಸದಸ್ಯರಿಗೆ ನಿರಂತರವಾಗಿ ಅರಿವು ಮೂಡಿಸುವುದು ಅತ್ಯಗತ್ಯವಾಗಿದೆ. ಮನೆ ಕೆಲಸದವರೂ ಸೇರಿದಂತೆ ವಿವಿಧ ಕ್ಷೇತ್ರಗಳಲ್ಲಿ ಕೆಲಸ ನಿರ್ವಹಿಸುವ ಮಹಿಳೆಯರ ಸುರಕ್ಷತೆ ಮತ್ತು ಹಕ್ಕುಗಳ ಬಗ್ಗೆಯೂ ಸೂಕ್ತ ಅರಿವು ಮೂಡಿಸಬೇಕಾಗಿದೆ ಎಂದು ಅವರು ಹೇಳಿದರು.

ಅಸಂಘಟಿತ ವಲಯದಲ್ಲಿ ಕಾರ್ಯನಿರ್ವಹಿಸುತ್ತಿರುವ ಮಹಿಳೆಯರು ತಮ್ಮ ಹಕ್ಕುಗಳು ಹಾಗೂ ಲೈಂಗಿಕ ಕಿರುಕುಳದ ವಿರುದ್ಧ ಲಭ್ಯವಿರುವ ಕಾನೂನು ರಕ್ಷಣೆಯ ಕುರಿತು ಹೆಚ್ಚಿನ ಅರಿವು ಹೊಂದುವುದು ಅಗತ್ಯವಾಗಿದೆ.

ದಿನಗೂಲಿ ಕಾರ್ಮಿಕರು ಹಾಗೂ ಇತರೆ ಅಸಂಘಟಿತ ಕ್ಷೇತ್ರಗಳಲ್ಲಿನ ಮಹಿಳೆಯರು ಹಲವು ಸಂದರ್ಭಗಳಲ್ಲಿ ತಮ್ಮ ಮೇಲಿನ ಕಿರುಕುಳವನ್ನು ಯಾರಿಗೆ ತಿಳಿಸಬೇಕು ಎಂಬುದೇ ಗೊತ್ತಿಲ್ಲದೆ ಸಮಸ್ಯೆ ಎದುರಿಸುತ್ತಾರೆ. ಆದ್ದರಿಂದ ಅಂತಹ ಮಹಿಳೆಯರಿಗೆ ಕಾನೂನು, ದೂರು ಸಲ್ಲಿಸುವ ವಿಧಾನ ಹಾಗೂ ಲಭ್ಯವಿರುವ ನೆರವು ಮತ್ತು ರಕ್ಷಣಾ ವ್ಯವಸ್ಥೆಗಳ ಕುರಿತು ವ್ಯಾಪಕವಾಗಿ ಅರಿವು ಮೂಡಿಸುವ ಮೂಲಕ ಸುರಕ್ಷಿತ ಹಾಗೂ ಗೌರವಯುತ ಕಾರ್ಯಸ್ಥಳ ನಿರ್ಮಾಣಕ್ಕೆ ಎಲ್ಲರೂ ಸಹಕರಿಸಬೇಕು ಎಂದು ಪ್ರಶಾಂತ ತುರಮುರಿ ಅವರು ತಿಳಿಸಿದರು.

ರಾಜ್ಯ ಮಹಿಳಾ ಆಯೋಗದ ಕಾರ್ಯದರ್ಶಿ ರೂಪಾ. ಆರ್, ಪೊಲೀಸ್ ಉಪ ಅಧೀಕ್ಷಕ ನಿರಂಜನ್, ರವಿ ದೊಡ್ಡಮನಿ, ಜಿಲ್ಲಾ ಪಂಚಾಯಿತ ಯೋಜನಾ ನಿರ್ದೇಶಕ ರವಿ ಬಂಗಾರಪ್ಪನವರ, ಸಮಾಜ ಕಲ್ಯಾಣ ಇಲಾಖೆ ಜಂಟಿ ನಿರ್ದೇಶಕ ರಾಮನಗೌಡ ಕನ್ನೊಳ್ಳಿ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪ ನಿರ್ದೇಶಕ ಆರ್. ಚೇತನಕುಮಾರ ಕಾರ್ಯಗಾರದಲ್ಲಿ ಪಾಲ್ಗೊಂಡಿದ್ದರು.

About The Author