ಬೆಳಗಾವಿ ಜಿಲ್ಲೆ ರಾಮದುರ್ಗ ಪಟ್ಟಣದ ಪುರಸಭೆ ಸಭಾ ಭವನದಲ್ಲಿ ಪೌರಾಡಳಿತ ನಿರ್ದೇಶನಾಲಯ ಹಾಗೂ ರಾಮದುರ್ಗ ಪುರಸಭೆ ಕಾರ್ಯಾಲಯದ ವತಿಯಿಂದ ಪೌರಕಾರ್ಮಿಕರ ದಿನಾಚರಣೆಯನ್ನು ಅರ್ಥಪೂರ್ಣವಾಗಿ ಆಚರಿಸಲಾಯಿತು.

ಕಾರ್ಯಕ್ರಮದ ಅಂಗವಾಗಿ ರಾಮದುರ್ಗ ಪುರಸಭೆಯ ಎಲ್ಲಾ ಪೌರಕಾರ್ಮಿಕರಿಗೆ ಉಚಿತ ಆರೋಗ್ಯ ತಪಾಸಣಾ ಶಿಬಿರವನ್ನು ಆಯೋಜಿಸಲಾಗಿತ್ತು. ಇದೇ ವೇಳೆ ಪೌರಕಾರ್ಮಿಕರ ಮಾನಸಿಕ ಧೈರ್ಯ ಹಾಗೂ ಉತ್ಸಾಹವನ್ನು ಹೆಚ್ಚಿಸುವ ಉದ್ದೇಶದಿಂದ ವಿವಿಧ ಕ್ರೀಡಾ ಸ್ಪರ್ಧೆಗಳನ್ನು ಏರ್ಪಡಿಸಲಾಗಿತ್ತು.
ನಂತರ ಪುರಸಭೆಯ ಸಭಾಭವನದಲ್ಲಿ ಪೌರಕಾರ್ಮಿಕರ ದಿನಾಚರಣೆ ಕಾರ್ಯಕ್ರಮ ನಡೆಯಿತು. ಕ್ರೀಡಾ ಸ್ಪರ್ಧೆಗಳಲ್ಲಿ ವಿಜೇತರಾದ ಪೌರಕಾರ್ಮಿಕರಿಗೆ ಪುರಸಭೆ ಮುಖ್ಯಾಧಿಕಾರಿ ಈರಣ್ಣ ಕೆ ಗುಡದಾರಿ ಅವರು ಬಹುಮಾನಗಳನ್ನು ವಿತರಿಸಿದರು.

ಈ ಸಂದರ್ಭದಲ್ಲಿ ಪುರಸಭೆಯ ಆರೋಗ್ಯ ನಿರೀಕ್ಷಕ ಚಂದನ್ ಪಾಟೀಲ್ ಅವರು ಪ್ರಾಸ್ತಾವಿಕವಾಗಿ ಮಾತನಾಡಿ, ಸಮಾಜದ ಸ್ವಚ್ಛತೆ ಮತ್ತು ಆರೋಗ್ಯ ಕಾಪಾಡುವಲ್ಲಿ ಪೌರಕಾರ್ಮಿಕರ ಮಹತ್ವದ ಪಾತ್ರವನ್ನು ವಿವರಿಸಿದರು.
ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಪುರಸಭೆ ಮುಖ್ಯಾಧಿಕಾರಿ ಈರಣ್ಣ .ಕೆ. ಗುಡದಾರಿ ಮಾತನಾಡಿ, ಪೌರಕಾರ್ಮಿಕರು ತಮ್ಮ ಆರೋಗ್ಯದ ಬಗ್ಗೆ ವಿಶೇಷ ಕಾಳಜಿ ವಹಿಸಿಕೊಂಡು ಕರ್ತವ್ಯ ನಿರ್ವಹಿಸಬೇಕು ಎಂದು ಸಲಹೆ ನೀಡಿದರು.
ಅಲ್ಲದೆ, ಪ್ರತಿಯೊಬ್ಬ ಪೌರಕಾರ್ಮಿಕರೂ ಅಗತ್ಯವಾಗಿ ಆರೋಗ್ಯ ವಿಮೆ ಮಾಡಿಸಿಕೊಳ್ಳುವಂತೆ ಕಿವಿಮಾತು ಹೇಳಿದರು.
ಪೌರಕಾರ್ಮಿಕರ ಸೇವೆಯನ್ನು ಗೌರವಿಸಿ, ಅವರ ಆರೋಗ್ಯ ಮತ್ತು ಸುರಕ್ಷತೆಗೆ ಆದ್ಯತೆ ನೀಡುವ ಸಂದೇಶದೊಂದಿಗೆ ಕಾರ್ಯಕ್ರಮ ಯಶಸ್ವಿಯಾಗಿ ನೆರವೇರಿತು.



